LatestMysore

ಹೈನುಗಾರಿಕಾ ಕ್ಷೇತ್ರಕ್ಕೆ ಎಚ್.ಡಿ.ದೇವೇಗೌಡರು, ಎಚ್.ಡಿ.ರೇವಣ್ಣ ರವರ ಕೊಡುಗೆ ಅಪಾರ:ಹೆಚ್ಡಿಕೆ

 ಸಾಲಿಗ್ರಾಮ(ಸಂಘಟನೆ ಮಂಜುನಾಥ್): ಹೈನುಗಾರಿಕಾ ಕ್ಷೇತ್ರಕ್ಕೆ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರು ಮತ್ತು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಕೊಡುಗೆ ಅಪಾರವಾಗಿದೆ ಎಂದು ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಇತ್ತೀಚೆಗೆ ತಾಲೂಕಿನ ಹೆಬ್ಸೂರು ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಬಿಎಂಸಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಎಚ್.ಡಿ.ದೇವೇಗೌಡರು ಪ್ರಧಾನ ಮಂತ್ರಿಗಳಾಗಿದ್ದ ಸಂದರ್ಭದಲ್ಲಿ ತಾಯಂದಿರು ಹೈನುಗಾರಿಕಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಅವರ ಬದುಕಿಗೆ ದಾರಿಯಾಗಬೇಕು ಎಂಬ ನಿಟ್ಟಿನಲ್ಲಿ ತೆಗೆದುಕೊಂಡ ನಿರ್ಧಾರಗಳಿಂದ ಇಂದು ಹೈನುಗಾರಿಕಾ ಕ್ಷೇತ್ರದಲ್ಲಿ  ಮಹಿಳೆಯರು, ಯುವಕರು, ರೈತರು ಸೇರಿದಂತೆ ಸರ್ವರೂ ತೊಡಗಿಸಿಕೊಳ್ಳುವುದರ ಮೂಲಕ ತಮ್ಮ ಆರ್ಥಿಕ ಮಟ್ಟವನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಉತ್ತಮ ಜೀವನವನ್ನು ನಡೆಸುತ್ತಿದ್ದಾರೆ ಎಂದರು.

ರಾಜ್ಯ ಸರ್ಕಾರವು ಅತಿಹೆಚ್ಚಿನ ರೀತಿಯಲ್ಲಿ ಜನಸಾಮಾನ್ಯರ ಮೇಲೆ ಸಾಲದ ಹೊರೆಯನ್ನು ಹೊರಿಸಿದೆ. ರಾಜ್ಯ ಸರ್ಕಾರವು ಮಹಿಳೆಯರಿಗೆ ನೀಡುತ್ತಿರುವ ಗೃಹಲಕ್ಷ್ಮಿ ಯೋಜನೆಗೆ ನಮ್ಮ ವಿರೋಧವಿಲ್ಲ  ಆದರೆ ಜನರ ಬದುಕನ್ನು ಸರಿಪಡಿಸುವಂತಹ ಕಾರ್ಯಕ್ರಮಗಳನ್ನು ಸರ್ಕಾರವು ನೀಡಬೇಕು. ತಂಬಾಕು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ ರೈತರನ್ನು ಕಡೆಗಣಿಸಿದರೆ ದೇಶದ ಮುಂದಿನ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದರು.

ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ  ಅತಿ ಹೆಚ್ಚು ಕೆಲಸ ಕಾರ್ಯಗಳನ್ನು ಮಾಡುವುದರ ಜೊತೆಗೆ ಸರ್ವರೊಂದಿಗೂ ಕೂಡ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತ ಕೆಲಸ ಮಾಡುತ್ತಿದ್ದರು. ಆದರೂ ಕೂಡ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋಲು ಅನುಭವಿಸಬೇಕಾಯಿತು. ಮುಂದಿನ ದಿನಗಳಲ್ಲಿ ಅವರನ್ನು ಅತಿ ಹೆಚ್ಚಿನ ಮತಗಳ ಅಂತರದಿಂದ ಆಯ್ಕೆ ಮಾಡುವ ಮೂಲಕ ಕ್ಷೇತ್ರದ ಜನರು ಸಾ.ರಾ.ಮಹೇಶ್ ಅವರು ಮಂತ್ರಿ ಆಗಬೇಕೆಂಬ ಕೂಗು ಕೇಳಿ ಬರುತ್ತಿದೆ ಅದು ಸಾಕಾರಗೊಳ್ಳಲು ಕ್ಷೇತ್ರದ ಜನತೆ ಅವರಿಗೆ ಆಶೀರ್ವದಿಸಬೇಕೆಂದು ಮನವಿ ಮಾಡಿದರು.

ಮಾಜಿ ಸಚಿವ ಸಾ.ರಾ.ಮಹೇಶ್ ಮಾತನಾಡಿ ಗ್ರಾಮದಲ್ಲಿ ಸುಮಾರು 2ಕೋಟಿ ರೂ ವೆಚ್ಚದಲ್ಲಿ ಸಮುದಾಯ ಭವನವನ್ನು ದೇವೇಗೌಡರ ಹೆಸರಿನಲ್ಲಿ ಅತಿ ಶೀಘ್ರದಲ್ಲಿ ಮಾಡಲಾಗುವುದು. ಈ ಹಿಂದೆಯೂ ಕೂಡ ಗ್ರಾಮದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಮುಂದಿನ ದಿನಗಳಲ್ಲಿಯೂ ಎಚ್.ಡಿ.ಕುಮಾರಸ್ವಾಮಿ ಅವರ ಸಹಕಾರ ಹಾಗೂ ಆಶೀರ್ವಾದದೊಂದಿಗೆ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ  ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮಾಜಿ ಶಾಸಕರಾದ ಅಶ್ವಿನ್ ಕುಮಾರ್, ಕೆ.ಮಹದೇವ್, ಮೈಮುಲ್ ನಿರ್ದೇಶಕರಾದ ಎ.ಟಿ.ಸೋಮಶೇಖರ್, ಉಮಾಶಂಕರ್, ಎಪಿಎಂಸಿ ಮಾಜಿ ಅಧ್ಯಕ್ಷ ಕುಪ್ಪಳ್ಳಿ ಸೋಮಶೇಖರ್, ಜಿ.ಪಂ. ಮಾಜಿ ಅಧ್ಯಕ್ಷ ಸಿ.ಜೆ.ದ್ವಾರಕೀಶ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ತಾಲೂಕು ಜೆ.ಡಿ.ಎಸ್ ಅಧ್ಯಕ್ಷ ಮೆಡಿಕಲ್ ರಾಜಣ್ಣ,

ಯುವ ಘಟಕದ ಅಧ್ಯಕ್ಷ ಕರ್ತಾಳು ಮಧು, ಯುವ ಮುಖಂಡ ಸಿ.ಬಿ.ಲೋಕೇಶ್, ಸಂಘದ ಅಧ್ಯಕ್ಷ ಗೋವಿಂದೇಗೌಡ, ಉಪಾಧ್ಯಕ್ಷೆ ಶಾರದಮ್ಮ, ನಿರ್ದೇಶಕರಾದ ಸುನಿಲ್ ಕುಮಾರ್, ರಮೇಶ್, ಶ್ರೀನಿವಾಸ್, ನಾಗೇಶ್, ರೋಹಿತ್, ರಾಮಶೆಟ್ಟಿ, ರಾಜಮ್ಮ, ಭಾರತಿ, ಗಿರಿಜಮ್ಮ, ಕಾರ್ಯದರ್ಶಿ ಗಿರೀಶ್, ಸಿಬ್ಬಂದಿಗಳಾದ ಹರ್ಷಿತ್, ಆದರ್ಶ, ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬಳಿಗಾರ್, ತಹಸೀಲ್ದಾರ್ ರುಖಿಯಾಬೇಗಂ,  ತಾ.ಪಂ. ಇಓ ರವಿಕುಮಾರ್, ಮೈಮುಲ್ ಅಧಿಕಾರಿಗಳು, ಮುಖಂಡರಾದ ಮಹೇಂದ್ರ, ಅಶೋಕ್, ನಾಗೇಶ್ ಸೇರಿದಂತೆ ಹಲವರು ಇದ್ದರು.

admin
the authoradmin

Leave a Reply

Translate to any language you want