ಕುಶಾಲನಗರ ತಾಲ್ಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಭೆ… ವಿಕೋಪ ನಿರ್ವಹಣೆಗೆ ಶಾಸಕ ಡಾ.ಮಂತರ್ ಗೌಡ ಸೂಚನೆ

ಕುಶಾಲನಗರ (ರಘುಹೆಬ್ಬಾಲೆ): ಮುಂಗಾರು ಮಳೆಯಿಂದ ಸಂಭವಿಸಬಹುದಾದ ಪ್ರಕೃತಿ ವಿಕೋಪ ನಿರ್ವಹಣೆಗಾಗಿ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ತಾಲ್ಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಭೆ ಶಾಸಕ ಡಾ.ಮಂತರ್ ಗೌಡ ಅಧ್ಯಕ್ಷತೆಯಲ್ಲಿ ನಡೆಯಿತು.
ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ‘ಜಿಲ್ಲೆಯಲ್ಲಿ ಮಳೆಗಾಲ ಆರಂಭಗೊಂಡಿದೆ. ಮಳೆಯಿಂದಾಗಿ ಯಾವುದೇ ಅನಾಹುತ ಸಂಭವಿಸದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ‘ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚರಂಡಿ, ರಸ್ತೆಗಳ ನಿರ್ವಹಣೆ ಹೆಚ್ಚಿನ ಒತ್ತು ನೀಡಬೇಕು. ಗುಂಡಿ ಬಿದ್ದ ರಸ್ತೆಗಳಿಗೆ ವೆಟ್ ಮಿಕ್ಸ್ ಹಾಕಿ ರಸ್ತೆಯಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
‘ತಾಲ್ಲೂಕಿನ ಶಾಲೆ, ಅಂಗನವಾಡಿ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು. ನೀರು ನಿಲದಂ ಗಿಡಗಂಟಿಗಳನ್ನು ತೆರವುಗೊಳಿಸಬೇಕು. ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಕ್ರಮ ಕೈಗೊಳ್ಳಬೇಕು’ ಎಂದು ಶಿಕ್ಷಣ ಹಾಗೂ ಆರೋಗ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ‘ದುರಸ್ತಿಯಲ್ಲಿರುವ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳಲ್ಲಿ ಪಾಠ ಮಾಡದೆ ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಬೇರೆ ಸುರಕ್ಷಿತ ಕಟ್ಟಡಗ-ಳಲ್ಲಿ ಮಾತ್ರ ತರಗತಿ ನಡೆಸಬೇಕು’ ಎಂದು ತಿಳಿಸಿದರು.
‘ಮಳೆಗಾಲದಲ್ಲಿ ವಿದ್ಯುತ್ ಅನಾಹುತ ಸಂಭವಿಸದಂತೆ ಚೆಸ್ಕಂ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಈಗಾಗಲೇ ₹40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಹೆಚ್ಚಿನವಿದ್ಯುತ್ ಕಂಬಗಳಿಗೆ ಹಾನಿಯಾಗದಂತೆ ಮುಂಜಾಗ್ರತೆ ವಹಿಸಬೇಕು’ ಎಂದು ತಿಳಿಸಿದರು.
ಚೆಸ್ಕಂ ಸಹಾಯಕ ಎಂಜಿನಿಯರ್ ಮಂಜುನಾಥ್ ಮಾತನಾಡಿ, ‘ಕಳೆದ ವರ್ಷ ಮಳೆಯಿಂದ 785 ವಿದ್ಯುತ್ ಕಂಬಗಳಿಗೆ ಹಾನಿಯಾಗಿತ್ತು. ಈ ವರ್ಷ 60 ಕಂಬಗಳಿಗೆ ಹಾನಿಯಾಗಿದೆ. ಹೆಚ್ಚಿನ ಅನಾಹುತ ಸಂಭವಿಸದಂತೆ ಕ್ರಮ ಕೈಗೊಳ್ಳಲಾಗಿದೆ’ ಎಂದರು.
‘ಮಳೆಗಾಲದಲ್ಲಿ ಅರಣ್ಯ, ಚೆಸ್ಕಂ, ಆರೋಗ್ಯ, ಶಿಕ್ಷಣ, ಪಂಚಾಯಿತಿ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕೆಲಸ ಮಾಡಬೇಕು. ಹೆಚ್ಚಿನ ಅನಾಹುತ ನಡೆಯದಂತೆ ಕ್ರಮ-ವಹಿಸಬೇಕು’ ಎಂದು ಖಡಕ್ ಸೂಚನೆ ನೀಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಪ್ಪಣ ಮಾತನಾಡಿ, ‘ಈಗಾಗಲೇ ತಾಲ್ಲೂಕು ವ್ಯಾಪ್ತಿಯಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಮಳೆಗಾಲದಲ್ಲಿ ಹೆಚ್ಚಿನ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ಸ್ವಚ್ಛತೆ ಮಾಡಿಕೊಳ್ಳಬೇಕು. ದುಸ್ಥಿತಿಯಲ್ಲಿ-ರುವ ವಾಸದ ಮನೆಗಳನ್ನು ಗುರುತಿಸಿ ಅವರಿಗೆ ನೋಟಿಸ್ ನೀಡಬೇಕು ಎಂದು ತಿಳಿಸಲಾಗಿದೆ’ ಎಂದರು.
‘ಮಳೆ ಪ್ರಮಾಣ ಹೆಚ್ಚಾದಾಗ ನದಿ ಅಂಚಿನಲ್ಲಿರುವ ನೆಲ್ಲಿಹುದಿಕೇರಿ, ವಾಲ್ಲೂರು ತ್ಯಾಗತ್ತೂರು, ನಂಜ-ರಾಯಪಟ್ಟಣ, ಹೊಸಪಟ್ಟಣ, ಗುಡ್ಡೆಹೊಸೂರು, ಕುಶಾಲನಗರ ಭಾಗದ ಇಂದಿರಾ ಬಡಾವಣೆ, ಸಾಯಿ ಬಡಾವಣೆ, ಕುವೆಂಪು ಬಡಾವಣೆ, ಕೂಡುಮಂಗಳೂರು, ಕೂಡಿಗೆ, ಕಣಿವೆ, ಹೆಬ್ಬಾಲೆ, ತೊರೆನೂರು, ಶಿರಂಗಾಲಭಾಗದಲ್ಲಿ ಮನೆಗಳಿಗೆ ಹಾನಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ನದಿ ಅಂಚಿನ ಮನೆಗಳಿಗೆ ನೋಟಿಸ್ ನೀಡಬೇಕು. ತುರ್ತುಪರಿಸ್ಥಿತಿ ಸಂದರ್ಭ ಅಲ್ಲಿನ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ವಸತಿ ಯೋಜನೆ ಕಲ್ಪಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸಲಹೆ ನೀಡಿದರು.
‘ತಾಲ್ಲೂಕು ವ್ಯಾಪ್ತಿಯಲ್ಲಿ-ರುವ ಅಸುರಕ್ಷಿತ ಕಟ್ಟಡಗಳನ್ನು ಗುರುತು ಮಾಡಿ ಅಂತಹ ಮನೆಗಳಿಗೆ ನೋಟಿಸ್ ನೀಡಿ ಸಾಧ್ಯವಾದರೆ ಮನೆಯ ಜನರನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು. ವಿವಿಧ ಇಲಾಖಾಧಿಕಾರಿಗಳು ತಮ್ಮ ಇಲಾಖೆಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ತಹಶೀಲ್ದಾರ್ ಕೃಷ್ಣಮೂರ್ತಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.







