LatestMysore

ಕುರುಬ ಸಮುದಾಯವನ್ನು ಎಸ್.ಟಿ.ಗೆ  ಸೇರಿಸಲು ಕೇಂದ್ರ ಶೀಘ್ರ ಕ್ರಮಕೈಗೊಳ್ಳಲಿ: ನಿವೃತ್ತ ಪಿಡಿಒ ಕೆಂಚೇಗೌಡ

ಹುಣಸೂರು(ಹಿರೀಕ್ಯಾತನಹಳ್ಳಿ ಸ್ವಾಮಿಗೌಡ): ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್.ಟಿ.) ಪಟ್ಟಿಗೆ ಸೇರಿಸುವಂತೆ ಕೇಂದ್ರ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ನಿವೃತ್ತ ಪಿಡಿಒ ಹಾಗೂ ಕುರುಬ ಸಮಾಜದ ಮುಖಂಡ ಕೆಂಚೇಗೌಡ ಆಗ್ರಹಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಗಿನೆಲೆ ಮಹಾಸಂಸ್ಥಾನದ ಪೀಠಾಧ್ಯಕ್ಷ ನಿರಂಜನಾನಂದಪುರಿ ಸ್ವಾಮೀಜಿ ಅವರ ನೇತೃತ್ವದಲ್ಲಿ ಹಲವು ವರ್ಷಗಳಿಂದ ಕುರುಬ ಸಮುದಾಯವನ್ನು ಎಸ್.ಟಿ. ಪಟ್ಟಿಗೆ ಸೇರಿಸುವಂತೆ ನಿರಂತರ ಹೋರಾಟ ನಡೆಯುತ್ತಿದೆ. ಈ ಹೋರಾಟದ ಭಾಗವಾಗಿ ಕಾಗಿನೆಲೆಯಿಂದ ಬೆಂಗಳೂರಿನವರೆಗೆ ಪಾದಯಾತ್ರೆಯನ್ನೂ ನಡೆಸಲಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರವು ಈಗಾಗಲೇ ಕುರುಬರನ್ನು ಎಸ್.ಟಿ. ಪಟ್ಟಿಗೆ ಸೇರಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಅಗತ್ಯವಿದ್ದ ಕೆಲವು ಸ್ಪಷ್ಟನೆಗಳನ್ನೂ ನೀಡಿದೆ. ಸಂಬಂಧಿಸಿದ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಆದರೆ, ಸುಪ್ರೀಂ ಕೋರ್ಟ್‌ನ ಕೆಲವು ನಿಬಂಧನೆಗಳು ಹಾಗೂ ಸಂವಿಧಾನಾತ್ಮಕ ತಿದ್ದುಪಡಿಗಳ ಅಗತ್ಯವಿರುವ ಕಾರಣ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂದು ತಿಳಿಸಿದರು.

ಇತ್ತೀಚೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಈ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿರುವುದು ಸಮುದಾಯದಲ್ಲಿ ಆಶಾಭಾವನೆ ಮೂಡಿಸಿದೆ. ರಾಜ್ಯ ಸರ್ಕಾರ ಕಳುಹಿಸಿರುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಆದ್ಯತೆ ಮೇರೆಗೆ ಪರಿಗಣಿಸಿ, ಕುರುಬ ಸಮುದಾಯವನ್ನು ಶೀಘ್ರವೇ ಎಸ್.ಟಿ. ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು.

ಕುರುಬ ಸಮುದಾಯಕ್ಕೆ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮುನ್ನಡೆಯಲು ಸಂವಿಧಾನಾತ್ಮಕವಾಗಿ ದೊರೆಯಬೇಕಾದ ಸೌಲಭ್ಯಗಳು ಲಭಿಸುವಂತೆ ಕೇಂದ್ರ ಸರ್ಕಾರ ಶೀಘ್ರ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ನಿವೃತ್ತ ಅಧಿಕಾರಿಗಳಾದ ತಿಪ್ಪೇಗೌಡ, ತಮ್ಮಣ್ಣೇಗೌಡ, ಜವರೇಗೌಡ ಹಾಗೂ ಹರೀಶ್ ಗುಡ್ಡಪ್ಪ ಉಪಸ್ಥಿತರಿದ್ದರು.

admin
the authoradmin

Leave a Reply