ಮೈಸೂರು: ಅದಮ್ಯ ರಂಗಶಾಲೆಯ ವತಿಯಿಂದ ನಗರದ ಹೂಟಗಳ್ಳಿಯಲ್ಲಿರುವ ದಕ್ಷ ಕಾಲೇಜಿನ ಸಭಾಂಗಣದಲ್ಲಿ ‘ಪಿಯುಸಿ ಪಠ್ಯಾಧಾರಿತ ರಂಗರೂಪ ಪ್ರದರ್ಶನ ಹಾಗೂ ಗಣ್ಯ ಸಾಧಕರಿಗೆ ಅಭಿನಂದನ’ ಸಮಾರಂಭವನ್ನು ಆ. 12 ರಂದು ಸಂಜೆ 6 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ರಂಗಶಾಲೆಯ ಕಾರ್ಯದರ್ಶಿ ಚಂದ್ರು ಮಂಡ್ಯ ತಿಳಿಸಿದ್ದಾರೆ.
ವಿವಿಧ ಕ್ಷೇತ್ರದ ಗಣ್ಯ ಸಾಧಕರಾದ ಮೈಸೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಗ್ಲೋಬಲ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ.ಪಿ. ಜಯಚಂದ್ರರಾಜು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಡಾ.ಕೆ.ಬಿ. ಲಿಂಗರಾಜು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ‘ಶ್ರೀವಿಜಯ ಸಾಹಿತ್ಯ ದತ್ತಿ ಪ್ರಶಸ್ತಿ’ ಪುರಸ್ಕೃತ ಸಾಹಿತಿ ಟಿ. ಸತೀಶ್ ಜವರೇಗೌಡ ಅವರನ್ನು ಅಭಿನಂದಿಸಲಾಗುವುದು.
ಸಮಾರಂಭದ ಉದ್ಘಾಟನೆಯನ್ನು ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಡಾ. ಮೀರಾ ಶಿವಲಿಂಗಯ್ಯ ನೆರವೇರಿಸಲಿದ್ದು, ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ನಾಗರಾಜು ವಿ. ಭೈರಿ ಅಧ್ಯಕ್ಷತೆ ವಹಿಸುವರು. ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರು ಹಾಗೂ ಪ್ರಸಿದ್ಧ ಜಾನಪದ ವಿದ್ವಾಂಸರಾದ ಪ್ರೊ. ನಂಜಯ್ಯ ಹೊಂಗನೂರು ಅವರು ಗಣ್ಯ ಸಾಧಕರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಲಿದ್ದಾರೆ.








