ಹುಣಸೂರು(ಹಿರೀಕ್ಯಾತನಹಳ್ಳಿ ಸ್ವಾಮಿಗೌಡ): ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಹುಣಸೂರು ತಾಲ್ಲೂಕು ಹಿರಿಕ್ಯಾತನಹಳ್ಳಿ ಗ್ರಾಮದ ಅಗ್ನಿವೀರ್ ನಂದನ್ ಕುಟುಂಬದವರಿಗೆ ಸಾಂತ್ವನ ಹೇಳಿದ ಶಾಸಕ ಜಿ.ಡಿ.ಹರೀಶ್ ಗೌಡ ಅವರು, ವೈಯಕ್ತಿಕವಾಗಿ 2 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಿದರು.

ಅಗ್ನಿವೀರ್ ಆಗಿ ಸೇವೆ ಸಲ್ಲಿಸುತ್ತಿದ್ದ ನಂದನ್, 15 ದಿನಗಳ ಹಿಂದೆ ಹಿನಕಲ್ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಜಿ.ಡಿ. ಹರೀಶ್ ಗೌಡ, ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ದೇಶದ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ ನಂದನ್ ಅವರ ಅಕಾಲಿಕ ನಿಧನದಿಂದ ಅವರ ಕುಟುಂಬಕ್ಕೆ ಮಾತ್ರವಲ್ಲದೆ ಸಮಾಜ ಹಾಗೂ ದೇಶಕ್ಕೂ ತುಂಬಲಾರದ ನಷ್ಟವಾಗಿದೆ. ದೇಶ ಸೇವೆ ಸಲ್ಲಿಸುತ್ತಿದ್ದ ಯುವಕನನ್ನು ಕಳೆದುಕೊಂಡಿದ್ದು, ಪ್ರತಿಯೊಬ್ಬರಿಗೂ ದುಖ ತಂದಿದೆ. ನಂದನ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಹೇಳಿದರು.

ಅಲ್ಲದೇ ಇಂತಹ ದುರ್ಘಟನೆಗಳು ರಸ್ತೆ ಸುರಕ್ಷತೆಯ ಬಗ್ಗೆ ಎಚ್ಚರಿಸುತ್ತವೆ. ವಾಹನ ಸವಾರರು ಸುರಕ್ಷತೆಗೆ ಆದ್ಯತೆ ನೀಡಿ, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಗಳನ್ನು ಕಡ್ಡಾಯವಾಗಿ ಬಳಸುವುದರ ಜೊತೆಗೆ ಅತಿವೇಗ ಮತ್ತು ಅಜಾಗರೂಕ ಚಾಲನೆಯನ್ನು ತಪ್ಪಿಸಬೇಕು.

ಒಂದು ಕ್ಷಣದ ಎಚ್ಚರಿಕೆ ಒಂದು ಕುಟುಂಬದ ಬದುಕನ್ನು ಉಳಿಸಬಲ್ಲದು ಎಂದು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಮನವಿ ಮಾಡಿದರು.








