ಹುಣಸೂರು(ಹಿರೀಕ್ಯಾತನಹಳ್ಳಿ ಸ್ವಾಮಿಗೌಡ): ಕಳೆದ ಜೂನ್ 28ರ ಭಾನುವಾರ ಸಂಜೆ ನಡೆದಿದ್ದ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ. ಆ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಹುಣಸೂರು ನಗರದ ದಾವಣಿಬೀದಿ ನಿವಾಸಿ ಸಿದ್ದಶೆಟ್ಟಿಯವರ ಪತ್ನಿ ಕಲಾವತಿ(56) ಎಂಬುವರೇ ಸಾವಿನಲ್ಲೂ ಸಾರ್ಥಕತೆ ಮೆರೆದವರಾಗಿದ್ದಾರೆ. ಇವರಿಗೆ ಪತಿ, ಇಬ್ಬರು ಮಕ್ಕಳಿದ್ದಾರೆ.
ಜೂ.28ರ ಭಾನುವಾರ ಮೃತ ಕಲಾವತಿಯವರು ತಮ್ಮ ಪತಿಯೊಂದಿಗೆ ಜಮೀನಿನ ಕೆಲಸ ಮುಗಿಸಿಕೊಂಡು ಟಿವಿಎಸ್ ಬೈಕ್ ನಲ್ಲಿ ಮನೆಗೆ ಮರುಳುತ್ತಿದ್ದ ವೇಳೆ ಹಿಂಬದಿಯಿಂದ ಟ್ಯಾಕ್ಟರ್ ಡಿಕ್ಕಿ ಹೊಡೆದ ರಭಸಕ್ಕೆ ಕೆಳ ಬಿದ್ದು ತಲೆಗೆ ತೀವ್ರ ಪೆಟ್ಟು ಬಿದ್ದು ಪ್ರಜ್ಞಾಹೀನರಾಗಿದ್ದರು. ತಕ್ಷಣ ಅವರಿಗೆ ಹುಣಸೂರಿನ ಬಸವ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕೆ.ಆರ್.ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಂತರ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ. ಅಪಘಾತದ ನಂತರ ಟ್ರ್ಯಾಕ್ಟರ್ ನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದನು. ಇದೀಗ ಪೊಲೀಸರು ಟ್ರ್ಯಾಕ್ಟರ್ ನ್ನು ವಶಕ್ಕೆ ಪಡೆದಿದ್ದು, ಈ ಸಂಬಂಧ ಹುಣಸೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








