ಕೊಡಗಿನ ಮಂದಿಗೆ ರಿಲ್ಯಾಕ್ಸ್ ನೀಡುವ ಹಬ್ಬವೇ “ಕೈಲ್ಮುಹೂರ್ತ” ಇದರ ಆಚರಣೆಯ ಹಿನ್ನಲೆಯೇ ಒಂಥರಾ ರೋಚಕ… ಇವತ್ತು ಆಧುನಿಕತೆಯ ಅಬ್ಬರದಲ್ಲಿ ಆಚರಣೆಯಲ್ಲಿ ಒಂದಿಷ್ಟು ಬದಲಾವಣೆಗಳು ಆಗಿರಬಹುದು ಆದರೆ ಅದೇ ಸಂಭ್ರಮ ಇನ್ನೂ ಉಳಿದುಕೊಂಡಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಪ್ರತಿ ವರ್ಷ ಸೆಪ್ಟಂಬರ್ 3ರಂದು ಕೈಲ್ ಮುಹೂರ್ತ ಹಬ್ಬವನ್ನು ಆಚರಿಸಲಾಗುತ್ತದೆ. ಅವತ್ತು ಮೇಲ್ಮೋಟಕ್ಕೆ ಹೊಟ್ಟೆ ತುಂಬಾ ಉಂಡು… ಕಂಠಮಟ್ಟ ಕುಡಿದು… ಸಂಭ್ರಮಿಸುವ ಹಾಗೂ ಮೈದಾನಗಳಲ್ಲಿ ವಿವಿಧ ಕ್ರೀಡೆಗಳಲ್ಲಿ ಸ್ಪರ್ಧಿಸಿ ಕ್ರೀಡಾ ಕೌಶಲ್ಯತೆಯನ್ನು ಪ್ರದರ್ಶಿಸುವುದು ಕಂಡು ಬರುತ್ತದೆ. ಹಾಗೆಂದು ಇಷ್ಟೆನೇ ಹಬ್ಬ ಎಂದುಕೊಂಡರೆ ತಪ್ಪಾಗುತ್ತದೆ… ಹಬ್ಬದ ಆಚರಣೆಗೂ ತನ್ನದೇ ಆದ ಇತಿಹಾಸವಿದೆ… ಶಾಸ್ತ್ರ ಸಂಪ್ರದಾಯವಿದೆ.. ಅದನ್ನು ನೋಡುತ್ತಾ ಹೋದರೆ ಅಚ್ಚರಿ ಮತ್ತು ರೋಮಾಂಚನವಾಗುತ್ತದೆ.

ಹಾಗೆನೋಡಿದರೆ ಕೊಡಗಿನಲ್ಲಿ ಆಚರಿಸಲ್ಪಡುವ ಹಬ್ಬಗಳೆಲ್ಲವೂ ಇತರೆಡೆಗಳಲ್ಲಿ ಆಚರಿಸುವ ಹಬ್ಬಗಳಿಗಿಂತ ಭಿನ್ನವಾಗಿ, ವೈಶಿಷ್ಟ್ಯಮಯವಾಗಿರುತ್ತದೆ. ಇಲ್ಲಿಯ ಹಬ್ಬಗಳ ಆಚರಣೆಯನ್ನು ಕೂಲಂಕುಷವಾಗಿ ಪರಿಶೀಲಿಸಿದರೆ ಪ್ರತಿಯೊಂದು ಹಬ್ಬವೂ ಭತ್ತದ ಕೃಷಿಗೆ ಅನುಗುಣವಾಗಿ ಆಚರಣೆಗೆ ಬಂದಿರುವುದು ಗೋಚರಿಸುತ್ತದೆ. ಜೊತೆಗೆ ಎಲ್ಲಾ ಹಬ್ಬಗಳ ಹಿಂದೆಯೂ ಶೂರತ್ವ, ಕ್ರೀಡೆಯ ಹಿನ್ನಲೆ, ಸಂಪ್ರದಾಯದ ಕಾಂತಿ, ಸಂಭ್ರಮ ಉಲ್ಲಾಸ ಇರುವುದು ಎದ್ದು ಕಾಣಿಸುತ್ತದೆ.

“ಕೈಲ್ಮುಹೂರ್ತ” ಹಬ್ಬವನ್ನು ಕೊಡವ ಭಾಷೆಯಲ್ಲಿ “ಕೈಲ್ಪೊಳ್ದ್” ಎಂದು ಕರೆಯಲಾಗುತ್ತದೆ. “ಕೈಲ್” ಎಂದರೆ ಆಯುಧ “ಪೊಳ್ದ್” ಎಂದರೆ ಹಬ್ಬ ಹಾಗಾಗಿ ಕೊಡಗಿನವರಿಗೊಂದು ಆಯುಧಪೂಜೆಯೇ… “ಕೈಲ್ಮುಹೂರ್ತ” ಹಬ್ಬವು ಕೊಡಗಿನವರ ಲೆಕ್ಕದ ಪ್ರಕಾರ ಚಿನ್ಯಾರ್ ತಿಂಗಳ ಹದಿನೆಂಟನೇ ತಾರೀಕಿನಂದು ಬರುತ್ತದೆ. ಅಂದರೆ ಪ್ರತಿವರ್ಷ ಸೆಪ್ಟಂಬರ್ 3ರಂದು ಆಚರಣೆ ನಡೆಯುತ್ತದೆ.ಕೈಲ್ಮುಹೂರ್ತ ಹಬ್ಬ ಕುಡಿಯುವುದು ತಿನ್ನುವುದರಲ್ಲಿ ಕಳೆದು ಹೋಗುವುದಿಲ್ಲ. ಈ ಹಬ್ಬಕ್ಕೆ ತನ್ನದೇ ಆದ ಆಚರಣೆ ಹಾಗೂ ರೋಮಾಂಚನಕಾರಿ ಹಿನ್ನಲೆಯಿದೆ.

ಗುಡ್ಡಕಾಡುಗಳಿಂದ ಕೂಡಿದ ಕೊಡಗಿನಲ್ಲಿ ಹಿಂದೆ ಭತ್ತದ ಕೃಷಿ ಹೊರತುಪಡಿಸಿದರೆ ಈಗಿನಂತೆ ವಾಣಿಜ್ಯ ಬೆಳೆಗಳ ಭರಾಟೆಯಿರಲಿಲ್ಲ. ಹೀಗಾಗಿ ಕೃಷಿಕರಿಗೆ ನಿರ್ಧಿಷ್ಟ ಕೃಷಿ ಭೂಮಿಗಳಿರಲಿಲ್ಲ. ಅವರವರ ಶಕ್ತಿ, ಸಾಮರ್ಥ್ಯಕ್ಕನುಗುಣವಾಗಿ ಭೂಮಿಯಲ್ಲಿ ಬೇಸಾಯ ಮಾಡುತ್ತಿದ್ದರು. ಈ ಸಂದರ್ಭ ಬೆಳೆಗಳನ್ನು ನಾಶ ಮಾಡಲು ಬರುವ ವನ್ಯ ಮೃಗಗಳೊಂದಿಗೆ ಹೋರಾಡಿ ಬೆಳೆಗಳನ್ನು ರಕ್ಷಿಸಿಕೊಳ್ಳುವುದು ಅನಿವಾರ್ಯವಾಗಿತ್ತು. ಆದ್ದರಿಂದ ಆಯುಧಗಳ ಅಗತ್ಯವಿತ್ತು. ಅಲ್ಲದೆ ಅದನ್ನು ಬಳಸಲು ಮಕ್ಕಳಿಗೆ ಚಿಕ್ಕಂದಿನಿಂದಲೇ ಹೇಳಿಕೊಡಲಾಗುತ್ತಿತ್ತು. ಆದುದರಿಂದ ಅಂದಿನಿಂದ ಇಂದಿನವರೆಗೆ ಇಲ್ಲಿನವರು ಶೂರರೇ. ಕೋವಿಯನ್ನು ಹಿಡಿಯದ ಕೈಗಳೇ ಇಲ್ಲವೆನ್ನಬೇಕು.

ಮಳೆಗಾಲಕ್ಕೆ ಮುನ್ನ ಬೇಟೆ ಇನ್ನಿತರೆ ಕಾರ್ಯಗಳಲ್ಲಿ ತೊಡಗಿರುತ್ತಿದ್ದ ಕೊಡಗಿನ ಜನ ಮುಂಗಾರು ಮಳೆ ಆರಂಭವಾಗುತ್ತಿದ್ದಂತೆಯೇ ಆಯುಧಗಳನ್ನು ಕೆಳಗಿಟ್ಟು ನೇಗಿಲು, ಗುದ್ದಲಿಗಳನ್ನು ಹಿಡಿದು ಗದ್ದೆಗಿಳಿದು ಬಿಡುತ್ತಿದ್ದರು. ಸಾಮಾನ್ಯವಾಗಿ ಜೂನ್ ತಿಂಗಳಲ್ಲಿ ಗದ್ದೆ ಕೆಲಸ ಆರಂಭವಾದರೆ ಅದು ಆಗಸ್ಟ್ ತಿಂಗಳಲ್ಲಿ ಮುಕ್ತಾಯವಾಗುತ್ತಿತ್ತು. ಸುರಿಯುವ ಮಳೆಯಲ್ಲಿ ಗದ್ದೆ ಕೆಲಸ ಮಾಡುವುದೆಂದರೆ ಸುಲಭದ ಕೆಲಸವಾಗಿರಲಿಲ್ಲ.

ಜೊತೆಗೆ ನಿರ್ಧಿಷ್ಟ ಸಮಯದಲ್ಲಿ ಮಾಡಿ ಮುಗಿಸಲೇ ಬೇಕಾಗಿದ್ದುದರಿಂದ ಬಿಡುವಿಲ್ಲದ ದುಡಿಮೆ ಅನಿವಾರ್ಯವಾಗಿತ್ತು. ಈ ದಿನಗಳಲ್ಲಿ ಕೋವಿಯನ್ನು ನೆಲ್ಲಕ್ಕಿ ಬಾಡೆ (ದೇವರಕೋಣೆ) ಯಲ್ಲಿಡಲಾಗುತ್ತಿತ್ತು. ಅಲ್ಲದೆ ಕಕ್ಕಡ ಮಾಸ (ಜುಲೈ 17ರಿಂದ ಆಗಸ್ಟ್ 16ರವರೆಗಿನ ಒಂದು ತಿಂಗಳ ಅವಧಿ)ದಲ್ಲಿ ಶುಭಕಾರ್ಯ, ಬೇಟೆ ಮುಂತಾದ ಯಾವುದೇ ಕಾರ್ಯವನ್ನು ಮಾಡುತ್ತಿರಲಿಲ್ಲ. ಕೃಷಿ ಚಟುವಟಿಕೆಯಷ್ಟೆ ಪ್ರಮುಖವಾಗಿರುತ್ತಿತ್ತು.

ಹೀಗೆ ದುಡಿಮೆಯಲ್ಲೇ ತಮ್ಮನ್ನು ತೊಡಗಿಸಿಕೊಂಡಿದ್ದ ಮಂದಿ ಮೈಕೊಡವಿಕೊಂಡು ಮೇಲೇಳುತ್ತಿದ್ದದ್ದು ಕೈಲ್ಮುಹೂರ್ತ ಹಬ್ಬದ ಸಂದರ್ಭವೇ ಆಗಿತ್ತು. ಹಾಗಾಗಿ ಕೈಲ್ಮುಹೂರ್ತ ದುಡಿದ ಜೀವಗಳಿಗೆ ಸಂತಸವನ್ನೀಯುವ ಹಬ್ಬವಾಗಿ ಆಚರಣೆಯಾಗುತ್ತಾ ಬಂದಿದೆ.

ಹಬ್ಬದ ದಿನದಂದು ತಮ್ಮೊಂದಿಗೆ ಹೆಗಲು ಕೊಟ್ಟು ದುಡಿದ ಎತ್ತುಗಳನ್ನು ಶುಭ್ರವಾಗಿ ಸ್ನಾನ ಮಾಡಿಸಿ ಬಳಿಕ ನೇಗಿಲು ನೊಗಗಳನ್ನು ಚೆನ್ನಾಗಿ ತೊಳೆದು ಅವುಗಳಿಗೆ ಪೂಜೆ ಮಾಡಲಾಗುತ್ತದೆ. ಬಳಿಕ ಸ್ನಾನ ಮಾಡಿಸಿದ ಎತ್ತುಗಳಿಗೆ ಎಣ್ಣೆ ಅರಿಶಿನವನ್ನು ಹಚ್ಚಿ ಕುತ್ತಿಗೆಗೆ ನೊಗವನ್ನಿಟ್ಟು ಪ್ರಾರ್ಥಿಸಿ ತೆಗೆಯಲಾಗುತ್ತದೆ. (ನಂತರ ಎತ್ತುಗಳನ್ನು ಉಳುಮೆಗೆ ಉಪಯೋಗಿಸುವುದು ಮುಂದಿನ ವರುಷದ ಮುಂಗಾರಿನಲ್ಲಿ ಮಾತ್ರ.) ಇತ್ತೀಚೆಗಿನ ದಿನಗಳಲ್ಲಿ ಗದ್ದೆಗಳು ಕಣ್ಮರೆಯಾಗಿ ಕಾಫಿ ತೋಟಗಳು ತಲೆ ಎತ್ತಿರುವುದರಿಂದ ಹಾಗೂ ಎತ್ತಿನ ಬದಲಾಗಿ ಟ್ರ್ಯಾಕ್ಟರ್ ಹಾಗೂ ಟಿಲ್ಲರ್ಗಳು ಬಂದಿರುವುದರಿಂದ ಎತ್ತುಗಳ ಬದಲಿಗೆ ಗೋಪೂಜೆ ಮಾಡುವುದು ಕೆಲವೆಡೆ ಕಂಡು ಬರುತ್ತದೆ.

ಹಬ್ಬದ ದಿನ ಮುಂಜಾನೆ ಮನೆಯ ಯಜಮಾನ ಸ್ನಾನ ಮಾಡಿ ಕುತ್ತರ್ಚಿ ಎಂಬ ಮರದ ಕೊಂಬೆಯನ್ನು ತಂದು ನೇರಳೆ ಮರದ ರೆಂಬೆಯೊಂದಿಗೆ ಜೋಡಿಸಿ ಬಿಲ್ಲು ಬಾಣವನ್ನು ತಯಾರಿಸುತ್ತಾರೆ. ನಂತರ ಹಾಲು ಬರುವ ಮರಕ್ಕೆ ಚುಚ್ಚಿ ಬರುತ್ತಾರೆ. (ಇದನ್ನು ಕೊಡವ ಭಾಷೆಯಲ್ಲಿ “ಆಪ್ ಪತರ್” ಎಂದು ಕರೆಯಲಾಗುತ್ತದೆ) ನಂತರ ಕೋವಿಯನ್ನು ದೇವರಕೋಣೆಯಲ್ಲಿಟ್ಟು ಇದಕ್ಕೆ ಕಾಡಿನಲ್ಲಿ ಸಿಗುವ ವಿಶೇಷ ಹೂವಾದ ಕೋವಿ ಹೂವನ್ನಿಟ್ಟು ತಳಿಯತಕ್ಕಿ ಬೊಳಕ್ (ಅಕ್ಕಿ ತುಂಬಿದ ತಟ್ಟೆಯಲ್ಲಿಟ್ಟ ದೀಪ)ನ್ನು ಉರಿಸಿ ಇದರ ಸುತ್ತ ಕುಟುಂಬದ ಸದಸ್ಯರು ಸೇರುತ್ತಾರೆ.

ಸಾಂಪ್ರದಾಯಿಕ ಉಡುಪಾದ ಕುಪ್ಪಚೇಲೆಯನ್ನು ಧರಿಸಿ ಹಿರಿಯರನ್ನು ಸೇರಿಸಿ ಅಕ್ಕಿ ಹಾಕಿ ಕುಟುಂಬವನ್ನು ರಕ್ಷಿಸುವಂತೆ ಪ್ರಾರ್ಥಿಸಿಕೊಳ್ಳುತ್ತಾರೆ. ಇದೇ ಸಂದರ್ಭ ಮನೆಯಲ್ಲಿ ಮಾಡಿದ ಭಕ್ಷ್ಯ ಭೋಜನ ಹಾಗೂ ಮದ್ಯವನ್ನು ಗುರುಕಾರಣರಿಗೆ ಇಟ್ಟು ಬೇಡಿಕೊಳ್ಳುತ್ತಾರೆ. ಅಲ್ಲದೆ ದೇವರ ಕೋಣೆಯಲ್ಲಿ ಕಿರಿಯರು ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಾರೆ.
ಹಿಂದಿನ ಕಾಲದಲ್ಲಿ ಹಬ್ಬದ ದಿನ ದೇವರ ಕೋಣೆಯಲ್ಲಿಟ್ಟ ಕೋವಿಯನ್ನು ಪೂಜೆಯ ಬಳಿಕ ಹೆಗಲಿಗೇರಿಸಿಕೊಂಡು ಕಾಡಿಗೆ ತೆರಳಿ ಕಾಡು ಪ್ರಾಣಿಗಳನ್ನು ಬೇಟೆಯಾಡಿ ಮಾಂಸದೊಂದಿಗೆ ಮನೆಗೆ ಬರುತ್ತಿದ್ದರು. ಆದುದರಿಂದಲೇ ಇಂದಿಗೂ ಈ ಹಬ್ಬದಲ್ಲಿ ಮಾಂಸಕ್ಕೆ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡಲಾಗಿದೆ.

ಇಂದು ಎಲ್ಲವೂ ಬದಲಾಗಿದೆ ಆದರೆ ಸಾಂಪ್ರದಾಯ ಉಳಿದುಕೊಂಡಿದ್ದರೂ ಬೇಟೆಯನ್ನು ನಿಷೇಧಿಸಿರುವುದರಿಂದ ಕೈಲ್ ಮುಹೂರ್ತ ಹಬ್ಬದ ದಿನದಂದು ಊರ ಮೈದಾನಗಳಲ್ಲಿ ಗ್ರಾಮೀಣ ಕ್ರೀಡಾಕೂಟಗಳನ್ನು ಏರ್ಪಡಿಸಿ ಅಲ್ಲಿ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಪುರುಷರು, ಮಹಿಳೆಯರು ಪಾಲ್ಗೊಂಡು ತಮ್ಮ ಶೌರ್ಯ ಪ್ರದರ್ಶಿಸುತ್ತಾರೆ.
ಸಾಮಾನ್ಯವಾಗಿ ಕೈಲ್ಮುಹೂರ್ತ ಹಬ್ಬದಲ್ಲಿ ಹಂದಿ ಮಾಂಸ ಸಾರು(ಪಂದಿಕರಿ) ಹಾಗೂ ಕಡುಬು(ಕಡಂಬಿಟ್ಟು) ಪ್ರಧಾನ ಭಕ್ಷ್ಯವಾಗಿರುವುದರಿಂದ ಎಲ್ಲಿಲ್ಲದ ಬೇಡಿಕೆಯಿರುವುದನ್ನು ಕಾಣಬಹದು. ಕೆಲವು ಮನೆಗಳಲ್ಲಿ ಕೈಲ್ ಮುಹೂರ್ತ ಹಬ್ಬಕ್ಕೆಂದೇ ಹಂದಿಗಳನ್ನು ಸಾಕಲಾಗುತ್ತದೆ. ಈ ಹಂದಿಗಳು ಸುಮಾರು 150ಕೆಜಿ ಗಿಂತಲೂ ಹೆಚ್ಚು ಬೆಳೆದಿರುತ್ತವೆ. ಇಂತಹ ಹಂದಿಗಳ ಮಾಂಸಕ್ಕೆ ತಿಂಗಳಿರುವಾಗಲೇ ಮುಂಗಡವಾಗಿ ಕಾಯ್ದಿರಿಸಲಾಗುತ್ತದೆ.

ಪ್ರತಿ ಮನೆಯಲ್ಲಿ ಕನಿಷ್ಟ ಐದರಿಂದ ಹತ್ತು ಕೆಜಿಯಷ್ಟು ಮಾಂಸವನ್ನು ಉಪಯೋಗಿಸುತ್ತಾರೆ. ಜೊತೆಗೆ ವಿವಿಧ ಬಗೆಯ ಮದ್ಯಗಳು ಸಾಥ್ ನೀಡುತ್ತವೆ. ಕೈಲ್ ಮುಹೂರ್ತ ಅಂಗವಾಗಿ ಹಲವು ದಿನಗಳ ಕಾಲ ಜಿಲ್ಲೆಯಾದ್ಯಂತ ಕ್ರೀಡಾಕೂಟಗಳು ನಡೆಯುತ್ತವೆ. ಇತ್ತೀಚೆಗಿನ ವರ್ಷಗಳಲ್ಲಿ ಕೆಲವು ಸಂಘ ಸಂಸ್ಥೆಗಳು ಹಬ್ಬ ಕಳೆದ ನಂತರ ಕೈಲ್ಮುಹೂರ್ತ ಸಂತೋಷಕೂಟ ಏರ್ಪಡಿಸಿ ಎಲ್ಲರೂ ಒಂದೆಡೆ ಕಲೆತು ಸಂಭ್ರಮಿಸುತ್ತಾರೆ.

ಸಾಮಾನ್ಯವಾಗಿ ಕೈಲ್ಮುಹೂರ್ತ ಹಬ್ಬಕ್ಕೆ ಕೊಡಗಿನ ಮಂದಿ ದೂರದ ಯಾವುದೇ ಊರಿನಲ್ಲಿದ್ದರೂ ತಪ್ಪದೆ ಬರುತ್ತಾರೆ. ಕುಟುಂಬದ ಹಾಗೂ ಊರ ಜನರೊಂದಿಗೆ ಬೆರೆತು ಹಬ್ಬದ ಸಂತಸವನ್ನು ಹಂಚಿಕೊಳ್ಳುತ್ತಾರೆ. ಹಾಗಾಗಿ ಕೈಲ್ಮುಹೂರ್ತ ಪ್ರತಿ ಕುಟುಂಬ ಹಾಗೂ ಊರಿನಲ್ಲಿ ಆತ್ಮೀಯ ಸಂಬಂಧ ಬೆಸೆಯುವ ಹಾಗೂ ಎಲ್ಲರೂ ಸಂಭ್ರಮ ಪಡುವ ಹಬ್ಬವಾಗಿ ಮುನ್ನಡೆಯುತ್ತಿದೆ.
B M Lavakumar







